ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ದೆಹಲಿಯಲ್ಲಿ ಬುಧವಾರ ಕಾಂಗ್ರೆಸ್ ವರಿಷ್ಠರನ್ನು ಭೇಟಿಯಾದ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿ ಸಿದ್ಧರಾಮಯ್ಯ ಕೂಡ ಗುರುವಾರ ದೆಹಲಿಗೆ ಪ್ರಯಾಣ ಬೆಳೆಸುತ್ತಿದ್ದಾರೆ.
ಶುಕ್ರವಾರ ದೆಹಲಿಯಲ್ಲಿ ನಡೆಯಲಿರುವ ಸಿಡಬ್ಲ್ಯುಸಿ ಸಭೆಯಲ್ಲಿ ಭಾಗವಹಿಸಲು ಸಿದ್ಧರಾಮಯ್ಯ ಅವರು ತೆರಳುತ್ತಿದ್ದಾರೆ. ಈ ವೇಳೆ ಡಿ.ಕೆ.ಶಿವಕುಮಾರ ಜೊತೆ ತೆರಳಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿಯಾಗಲಿದ್ದು, ಇದೇ ಸಂದರ್ಭದಲ್ಲಿ ಸಚಿವ ಸಂಪುಟ ಪುನಾರಚನೆ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆಯೂ ಚರ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಇತ್ತೀಚೆಗೆ ಜರುಗಿದ ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿದ್ದು, ಮುಡಾ, ವಾಲ್ಮೀಕಿ, ಅಬಕಾರಿ ಹಗರಣಗಳ ನಡುವೆ ಗೆಲುವು ಸಿಕ್ಕಿರುವುದು ಸಿದ್ಧರಾಮಯ್ಯ ಅವರ ವಿಶ್ವಾಸ ಹೆಚ್ಚಿಸಿದೆ. ದೆಹಲಿ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ನಾಲ್ವರು ಎಂಎಲ್‌ಸಿಗಳ ನಾಮನಿರ್ದೇಶನ ಮತ್ತು ಸಂಪುಟ ಪುನರಾರಚನೆ ಕುರಿತು ಚರ್ಚೆ ನಡೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.